ಬೆಂಗಳೂರು: ಸರ್ಕಾರಿ ನೌಕರರಿಗೆ ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ 17% ವೇತನ ಹೆಚ್ಚಳ ಮಾಡುವುದಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ವೇತನ ಹೆಚ್ಚಳದ ಆದೇಶ ಹೊರಡಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ, 1018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ತಿಳಿಸಿದೆ.
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.