ಪುತ್ತೂರು: ಇಂದು ಸಂಜೆ ಪುತ್ತೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ ರದ್ದಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸಿನ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆ ಸೇರಿದಂತೆ ಹಲವು ಯೋಜನೆಗಳ ಪ್ರಚಾರಾರ್ಥವಾಗಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಕಾರ್ಯಕ್ರಮ ರದ್ದಾಗಿರುವ ಹಿನ್ನೆಲೆಯಲ್ಲಿ, ಕಾರ್ಯಕ್ರಮವನ್ನು ಅಜೆಂಡಾವನ್ನು ಪ್ರತಿ ಮನೆಮನೆಗೆ ತಲುಪಿಸುವಂತೆ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ (61) ಇಂದು ಮುಂಜಾನೆ ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಧ್ರುವ ನಾರಾಯಣ್ ಅವರು ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಈ ಮಧ್ಯೆಯೇ ಧ್ರುವ ನಾರಾಯಣ್ ನಿಧನ ಹೊಂದಿದ್ದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.