ಭೋಪಾಲ್: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬೇತುಲ್‌ನಲ್ಲಿ ಇಂದು ನಸುಕಿನ ಜಾವ ನಡೆದಿದೆ. ಘಟನಯಲ್ಲಿ ಐವರು ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಗುಡ್ಗಾಂವ್ ಹಾಗೂ ಭೈಸ್ದೇಹಿ ಪ್ರದೇಶದ ನಡುವೆ ಘಟನೆ ನಡೆದಿದೆ, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಘಟನೆಯಲ್ಲಿ ಗಾಯಗೊಂಡ ಒರ್ವ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿದ್ದವರೆಲ್ಲರೂ ಮಹಾರಾಷ್ಟ್ರ ಮೂಲದ ಕಾರ್ಮಿಕರಾಗಿದ್ದು, ಹಬ್ಬದ ಹಿನ್ನೆಲೆಯಲ್ಲಿ ಕಾರಿನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಚಾಲಕನ ನಿರ್ಲಕ್ಷ್ಯತನದಿಂದ ಕಾರು ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.
ಘಟನೆ ನಡೆದ ತಕ್ಷಣವೇ ಕಾರಿನಿಂದ ಏಳು ಶವಗಳನ್ನು ಹೊರ ತೆಗೆಯಲಾಗಿದ್ದು ಉಳಿದ ದೇಹಗಳನ್ನು ಕಾರಿನಿಂದ ಹೊರ ತೆಗೆಯಲು ಕಾರಿನ ಭಾಗಗಳನ್ನು ಕತ್ತರಿಸಲಾಯಿತು ಎಂದು ಬೇತುಲ್ ಹಿರಿಯ ಪೊಲೀಸ್ ಅಧಿಕಾರಿ ಸಿಮಲಾ ಪ್ರಸಾದ್ ಹೇಳಿದ್ದಾರೆ.
‘ಬೆತುಲ್ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಿಂದ ನೋವುಂಟಾಗಿದೆ. ಮೃತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್)ಯಿಂದ ಮೃತ ವ್ಯಕ್ತಿಗಳ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.