ವಾಣಿಜ್ಯ ಜಾಹಿರಾತು

ಗುರುಗ್ರಾಮ್ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಮುಲಾಯಂ ಸಿಂಗ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಸಾವಿನ ಸುದ್ದಿಯನ್ನು ಸಮಾಜವಾದಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಖಚಿತಪಡಿಸಲಾಗಿದೆ.

ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ (ಅಕ್ಟೋಬರ್ 2) ಅವರ ಆರೋಗ್ಯ ಹದಗೆಟ್ಟ ನಂತರ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ರಾತ್ರಿಯ ವೇಳೆಯಲ್ಲಿಯೇ ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಅಂದರೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ಕಳೆದ 8 ದಿನಗಳಿಂದ ಮುಲಾಯಂ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಇರಲಿಲ್ಲ. ಮೇದಾಂತ ಆಸ್ಪತ್ರೆ ಗುರುವಾರ ಹೊರಡಿಸಿದ ಬುಲೆಟಿನ್‌ನಲ್ಲಿ, ಮುಲಾಯಂ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು.

ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ವರಿಷ್ಠರು ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಮುಲಾಯಂ ಸಿಂಗ್ ಯಾದವ್ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ವಾಣಿಜ್ಯ ಜಾಹಿರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.