ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ಕೊಂಕಣ ಮತ್ತು ಗೋವಾ, ಕೇರಳ ಮತ್ತು ಮಾಹೆಯಲ್ಲಿ ಮುಂದಿನ 5 ದಿನ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಸೇರಿದಂತೆ ಗುಜರಾತ್, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ & ಯಾನಂ, ತೆಲಂಗಾಣ ಇತರೆಡೆ ಚದುರಿದ ಹಾಗೂ ವ್ಯಾಪಕ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಮುಂದಿನ 5 ದಿನ ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ದಕ್ಷಿಣ ಒಳನಾಡು ಹಾಗೂ ಗುಜರಾತ್, ತೆಲಂಗಾಣ, ತಮಿಳುನಾಡು, ಪಾಂಡಿಚೇರಿ, ಕೇರಳ ಇತರೆಡೆ ಭಾರೀ ಮಳೆಯಾಗಲಿದ್ದು, ಕರ್ನಾಟಕದ ಕರಾವಳಿಯಲ್ಲಿ ಜು. 4 ಮತ್ತು ಜು. 5ರಂದು , ಕರ್ನಾಟಕದ ಉತ್ತರ ಒಳನಾಡಿನಲ್ಲಿ ಜು.5 ರಿಂದ ಜು.7ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಿದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ
ದ.ಕ ಜಿಲ್ಲೆ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದ್ದು ಭಕ್ತಾದಿಗಳು ಸ್ನಾನ ಘಟ್ಟದಲ್ಲಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯಲ್ಲಿ ಜು.4 ಮತ್ತು ಜು.5ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.