ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿಧನರಾಗಿ ಮೂರು ತಿಂಗಳು ಕಳೆದು ಹೋಗಿದೆ. ಆದರೂ ಇದುವರೆಗೂ ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳು ಪತ್ತೆಯಾಗಿಲ್ಲ. ಇದೀಗ ಆರೋಪಿಗಳ ಸುಳಿವು ಕೊಟ್ಟವರಿಗೆ 14 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಘೋಷಣೆ ಮಾಡಿದೆ.
ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ಮುಸ್ತಫಾ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ರೂ. ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ ಅಧಿಕೃತವಾಗಿ ತಿಳಿಸಿದೆ.
ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಅಂಗಡಿ ಇಟ್ಟುಕೊಂಡಿದ್ದರು. ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದು ದುಷ್ಕರ್ಮಿಗಳು ತಲ್ವಾರ್ ನಿಂದ ಪ್ರವೀಣ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದರು.
ಪ್ರವೀಣ್ ಮೇಲೆ ಹಲ್ಲೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಮೃತಪಟ್ಟಿದ್ದರು. ಪ್ರವೀಣ್ ಹತ್ಯೆ ಪ್ರಕರಣ ರಾಜ್ಯಾದ್ಯಂತ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿತ್ತು.
ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ನಂತರ ಸರ್ಕಾರ ಈ ಪ್ರಕರಣವನ್ನು ಎನ್ಐಎ ತನಿಖಗೆ ವಹಿಸಿತ್ತು.