ಮಂಗಳೂರು: ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್ಎಸ್ಯುಐ ಡಿ.17ರಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಈ ವಿದ್ಯಾರ್ಥಿ ವೇತನವನ್ನೇ ನಂಬಿಕೊಂಡು ಹಲವು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಾರೆ. ಹೀಗಾಗಿ ಕೇಂದ್ರ ಸರಕಾರ ತಕ್ಷಣವೇ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪದವಿ ಪರೀಕ್ಷೆಗಳು ಮುಗಿದು ಆರೇಳು ತಿಂಗಳು ಕಳೆದರೂ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಓದಲು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಇದೀಗ ಅವೈಜ್ಞಾನಿಕವಾಗಿ ಎನ್ಇಪಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ ಈ ಎಲ್ಲಾ ಸಮಸ್ಯೆಗಳ ವಿರುದ್ಧ ಡಿ.17ರಂದು ವಿಶ್ವವಿದ್ಯಾಲಯ, ಪದವಿ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದರು.