ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಜ್ಯದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡು ಆ ಶಾಲೆಗಳ ಅಭಿವೃದ್ದಿ ಕೆಲಸವನ್ನು ಕೈಗೆತ್ತಿಕೊಂಡಿದ್ದಾರೆ.
ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದ ಸುದೀಪ್ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್ ನಗರ ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ.
ಕಿಚ್ಚ ಸುದೀಪ್ ಅವರ ಈ ಕಾರ್ಯಕ್ಕೆ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು, ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್‍ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆ ಎಂದು ಹೇಳಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವರ ಅಭಿನಂದನಾ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್ ಟ್ವೀಟರ್ ನಲ್ಲೆ `ಥ್ಯಾಂಕ್ ಯೂ ಸರ್ ‘ ಎಂದಿದ್ದಾರೆ. ಕಿಚ್ಚ ಸುದೀಪ್ ಅವರ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು pic.twitter.com/LpAVMLwQ6g
— Dr Sudhakar K (@mla_sudhakar) August 10, 2020